ವಿವೇಕವಾರ್ತೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಚಿತ್ರನಟ ಗಣೇಶ್ ಕಿಶನ್ ಅಲಿಯಾಸ್ ಗೋಲ್ಟನ್ ಸ್ಟಾರ್ ಗಣೇಶ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೋಟಿಸ್ ಪ್ರಶ್ನಿಸಿ ನಟ ಗಣೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಹೇಳಿದೆ.
ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಮಾತ್ರ ಅವಕಾಶವಿದೆ. ಇದರ ಜೊತೆಗೆ, ಯಾವುದೇ ಬೃಹತ್ ಮತ್ತು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗದು. ಅಲ್ಲದೇ, ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗೆ ಅರ್ಜಿದಾರ ಗಣೇಶ್ ಮುಂದಿನ ಒಂದು ವಾರದಲ್ಲಿ ಉತ್ತರ ನೀಡಬೇಕು.
ಈ ಉತ್ತರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲನೆ ನಡೆಸಿ ವಿಚಾರಣೆ ಪೂರ್ಣಗೊಳಿಸಿಬೇಕೆಂದು ಸೂಚಿಸಿರುವ ನ್ಯಾಯಾಲಯ, ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯಲ್ಲಿಯೂ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಬಾರದು ಎಂದು ಸ್ಪಷ್ಟಪಡಿಸಿದೆ.