ವಿವೇಕ ವಾರ್ತೆ : ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಅವರ ಮಗಳ ಶವವು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಇನ್ನು ಅವರ ಪತಿಯ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರು ವರ್ಷಾ ಕುಟೆ, ಕಿಶೋರ್ ಕುಟೆ ಎಂದು ವರದಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಿಶೋರ್ ತನ್ನ ಹೆಂಡತಿ ಹಾಗೂ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ತನ್ನ ಪತ್ನಿ ಹಾಗೂ ಮೂರು ವರ್ಷದ ಮಗಳನ್ನು ಕೊಂದು ಆ ನಂತರ ನೇಣಿಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹತ್ಯೆ ಮಾಡಿದ ಬಳಿಕ ಆರೋಪಿ ಮನೆಯಿಂದ ಸುಮಾರು 15 ಕಿಲೋಮೀಟರ್ ದೂರವಿರುವ ಚಿಖ್ಲಿ ಎಂಬ ಪ್ರದೇಶಕ್ಕೆ ಬಂದಿದ್ದು, ಅಲ್ಲಿ ಮರವೊಂದಕ್ಕೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.
ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೂರು ವರ್ಷದ ಮಗಳನ್ನು ಆರೋಪಿ ಹತ್ಯೆ ಮಾಡಿದ್ದಾನೆ. ಘಟನೆ ನಡೆದಾಗ ದೊಡ್ಡ ಮಗಳು ಶಾಲೆಗೆ ಹೋಗಿದ್ದಳು. ಯಾವ ಕಾರಣಕ್ಕೆ ಹತ್ಯೆ ಮಾಡಿರಬಹುದು ಎಂದು ಪತ್ತೆ ಹಚ್ಚಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರು ತುಂಬಾ ಅನ್ಯೋನ್ಯವಾಗಿದ್ದರು, ಜಗಳವಾಡುತ್ತಿರಲಿಲ್ಲ. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ಪೊಲೀಸ್ ತನಿಖೆ ಬಳಿಕ ಬೆಳಕಿಗೆ ಬರಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಚಿಖ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.