ವಿವೇಕವಾರ್ತೆ : ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದ ಸಮೀಪ ಮಾಜಿ ಸಚಿವ ಎಚ್.ಡಿ. ರೇವಣ್ಣ ಆಪ್ತ ಹಾಗೂ ಗುತ್ತಿಗೆದಾರನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
ದಾಳಿಗೊಳಗಾದ ವ್ಯಕ್ತಿ ಗುತ್ತಿಗೆದಾರ ಅಶ್ವತ್ ಎಂದು ತಿಳಿದುಬಂದಿದೆ. ಇವರು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರು.
ಇವರು ಸ್ವಲ್ಪ ಸಮಯ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿದ್ದು ಬಳಿಕ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು.
ಅಶ್ವತ್ ಅವರು ಮನೆಗೆ ತೆರಳುವ ವಿಚಾರ ದುಷ್ಕರ್ಮಿಗಳಿಗೆ ತಿಳಿದಿದ್ದು, ಸೂರನಹಳ್ಳಿ ಹಂಪ್ಸ್ ಬಳಿ ಕಾರಿನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೇ ಕಲ್ಲು ತೂರಾಟ ನಡೆಸಿ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೇ ಕಾರು ರಿವರ್ಸ್ ತೆಗೆದ ಗುತ್ತಿಗೆದಾರ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಈ ವೇಳೆ ದುಷ್ಕರ್ಮಿಗಳು ಮೂಡಲಹಿಪ್ಪೆ ಗ್ರಾಮದ ತನಕ ಕಾರನ್ನು ಫಾಲೋ ಮಾಡಿದ್ದಾರೆ. ನಂತರ ಗುತ್ತಿಗೆದಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.
ಘಟನೆಯ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಅಶ್ವತ್ ದೂರು ನೀಡಿದ್ದಾರೆ.
ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು. ವಿಶೇಷ ತಂಡಗಳನ್ನು ರಚನೆ ಮಾಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಘಟನಾ ಸ್ಥಳದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ