ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ.
‘ವೈಯಾಲಿಕಾವಲ್ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ’ ಎಂದು ಮೂಲಗಳು ಹೇಳಿವೆ.
ನಾಗರಾಜ್ ಅವರು ಸನಾವುಲ್ಲಾ ಎಂಬಾತನ ಒಡೆತನದ ಇಪಿಪಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಕಂಪನಿ ಹೆಸರಿನಲ್ಲಿ ಹಣ ಪಡೆದು ವಂಚನೆ ನಡೆಸಲಾಗಿದೆ ಎಂದು ವೈಯಾಲಿಕಾವಲ್ ಠಾಣೆಗೆ ದೂರು ನೀಡಿದ್ದರು.
ಕಂಪನಿ ಮಾಲೀಕನ ಬದಲಾಗಿ ನಾಗರಾಜ್ ಅವರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನಾಗರಾಜ್ ಎರಡು ಪುಟಗಳ ಡೆತ್‌ನೋಟ್ ಬರೆದು ಬುಧವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂದು ಮೂಲಗಳು ಹೇಳಿವೆ.
ವೈಯಾಲಿಕಾವಲ್ ಪೊಲೀಸರು ಬೆಲ್ಟ್‌ನಿಂದ ಹಲ್ಲೆ ನಡೆಸಿದ್ದರು. ಶೂನಿಂದ ಒದ್ದಿದ್ದರು ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳ ಹೆಸರನ್ನೂ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ತಲಘಟ್ಟಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.